ನವದೆಹಲಿ : 8.59 ಕೋಟಿ ರೂ ಹಣ ಪತ್ತೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಜೊತೆಗೆ ವಿಚಾರಣೆಯನ್ನು ಬುಧವಾರಕ್ಕೆ (ನಾಳೆಗೆ) ಮುಂದೂಡಲಾಗಿದೆ.
ಇಂದು ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಡಿಕೆಶಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಡಿಕೆಶಿ ಪರ ಅಭಿಷೇಕ್ ಮನು ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ, ಇಡಿ ಪರ ನಟರಾಜ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದಾರೆ.