Site icon PowerTV

ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಯುತ್ತೆ ಈ ಬಾರಿಯ ಸ್ವಾತಂತ್ರ್ಯೋತ್ಸವ

ಶಿವಮೊಗ್ಗ: ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಜಿಲ್ಲಾಡಳಿತ ಸೂಚಿಸಿದೆ.

ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಸಮಾರಂಭದಲ್ಲಿ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕರೋನಾ ವಾರಿಯರ್ಸ್‍ಗಳನ್ನು ಗೌರವಿಸಲು ತೀರ್ಮಾನಿಸಲಾಗಿದೆ. ಅದರಂತೆ, ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.. ಇನ್ನುಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲಾ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲು ಜಿಲ್ಲಾಡಳಿತ ಸ್ಪಷ್ಟ ನಿರ್ದೇಶನ ನೀಡಿದೆ.

Exit mobile version