Friday, September 5, 2025
HomeUncategorizedಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ: ಸಿಎಂ ಬೊಮ್ಮಾಯಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವ್ಯವಸ್ಥಿತವಾಗಿ ಸಂಚು ರೂಪಿಸಿ ಪ್ರವೀಣ್‌ ಅವರನ್ನು ಹತ್ಯೆ ಮಾಡಲಾಗಿದೆ. ಈ ಕೃತ್ಯದ ಹಿಂದಿರುವ ಜಾಲವು ಅಂತರರಾಜ್ಯ ಮಟ್ಟದಲ್ಲಿ ಸಕ್ರಿಯವಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಸಂಪೂರ್ಣ ಮಾಹಿತಿ ಸಂಗ್ರಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಮಾಹಿತಿ ಸಂಗ್ರಹವಾದ ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸುವ ಕುರಿತು ಗೃಹ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದು ಹೇಳಿದರು.

ರಾಜ್ಯದಿಂದ ಕೇರಳವನ್ನು ಸಂಪರ್ಕಿಸುವ ಅಂತರರಾಜ್ಯ ಗಡಿ ಭಾಗದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲಾಗುವುದು. ತನಿಖಾ ಠಾಣೆಗಳನ್ನೂ ತೆರೆಯಲಾಗುವುದು. ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್‌ ಕ್ಯಾಂಪ್‌ ಆರಂಭಿಸಲಾಗುವುದು. ರಾತ್ರಿ ಗಸ್ತು ಹೆಚ್ಚಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗುವುದು. ಅಲ್ಲಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ ಇನ್ನೊಂದು ತುಕಡಿಯನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು.

ಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಯನ್ನೂ ತೀವ್ರಗೊಳಿಸಲಾಗಿದೆ. ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಎಲ್ಲ ಧರ್ಮಗಳ ಪ್ರಮುಖರ ಜತೆಗೂಡಿ ಶಾಂತಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular

Recent Comments