Site icon PowerTV

ನಾಳೆ ಸಿಎಂ ಸಿದ್ದರಾಮಯ್ಯ ಅಥಣಿ ಪ್ರವಾಸ

ಬೆಂಗಳೂರು : ಲೋಕಸಭಾ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಅಥಣಿ ಪ್ರವಾಸ ಕೈಗೊಳ್ಳಲಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರಕ್ಕೆ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ  ಕಟ್ಟಡ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಬಸವೇಶ್ವರ ಪ್ರತಿಮೆ ಲೋಕಾರ್ಪಣೆ

ಶುಕ್ರವಾರ ಬೆಳಗ್ಗೆ 11.15ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಂದ ಸಿಎಂ ಆಗಮಿಸಲಿದ್ದಾರೆ. ಬಳಿಕ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಅಥಣಿಯ ಕೆಎಲ್‌ಇ ಕಾಲೇಜು ಹೆಲಿಪ್ಯಾಡ್‌ಗೆ ಆಗಮಿಸಿ ಮಧ್ಯಾಹ್ನ 12.30ಕ್ಕೆ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.

ಅಥಣಿಯಿಂದ ಕೊಕಟನೂರ ಗ್ರಾಮಕ್ಕೆ ತೆರಳಲಿರುವ ಸಿಎಂ ಮಧ್ಯಾಹ್ನ 12.50ಕ್ಕೆ ಕೊಕಟನೂರು ಗ್ರಾಮದಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

Exit mobile version