Site icon PowerTV

ಅಪ್ಪ ಶೀಘ್ರವೇ ಮನೆಗೆ ಮರಳಲಿದ್ದಾರೆ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಹೆಚ್​.ಡಿ ಕುಮಾರಸ್ವಾಮಿಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ ಎಂದು ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಂದೆಯವರನ್ನು ಈಗ ವಾರ್ಡ್​ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದಾರೆ. ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರೀತಿ, ವಾತ್ಸಲ್ಯಕ್ಕೆ ಧನ್ಯವಾದ

ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತರಿಗೆ, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ವಿವಿಧ ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ನಿಖಿಲ್ ಹೇಳಿದ್ದಾರೆ.

Exit mobile version