Site icon PowerTV

ಕುಮಾರಸ್ವಾಮಿ ಕಳ್ಳ, ಸುಳ್ಳುಕೋರ.. ಅದಕ್ಕೆ ಬೇರೆಯವರನ್ನ ನಂಬಲ್ಲ : HDKಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ತಮ್ಮ ಹಾಗೂ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ಕುರಿತ ವೈರಲ್ ವಿಡಿಯೋ ಬಗ್ಗೆ ಟೀಕಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದಾಖಲೆ ಸಮೇತ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ​‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ ಎಂದು ಕುಟುಕಿದ್ದಾರೆ.

ಪುತ್ರ ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ. ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ. ಫೋನ್ ಸಂಭಾಷಣೆಯಲ್ಲಿ ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎಂದು ಹೇಳಿದ್ದಾರೆ.

ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳಲ್ಲಿ ಕೊಠಡಿ ರಿಪೇರಿಯಾಗಬೇಕಿದೆ. ಹೀಗಾಗಿ, ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆ ಇಲ್ಲಿದೆ ಎಂದು ಪತ್ರವೊಂದನ್ನ ಪೋಸ್ಟ್ ಮಾಡಿದ್ದಾರೆ.

ಕುಮಾರಸ್ವಾಮಿ ಸುಳ್ಳುಕೋರ

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಚಾಟಿ ಬೀಸಿದ್ದಾರೆ.

Exit mobile version