Site icon PowerTV

ಕಾಂಗ್ರೆಸ್​ನಲ್ಲಿ ಮೋದಿಗೆ ಸರಿಸಾಟಿಯಾದ ನಾಯಕನೇ ಇಲ್ಲ : ಯಡಿಯೂರಪ್ಪ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಸರಿಸಾಟಿಯಾದ ಯಾವುದೇ ನಾಯಕ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಇದನ್ನು ಸದುಪಯೋಗ ಪಡಿಸಿಕೊಂಡು ಹೆಚ್ಚು ಸ್ಥಾನ ಗೆಲ್ಲುವ ಸಂಕಲ್ಪ ತೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಜಗನ್ನಾಥ ಭವನದಲ್ಲಿ ನಡೆದ ಭೀಮಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ನರೇಂದ್ರ ಮೋದಿಯವರು ದೇಶದಲ್ಲಿ ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಅವರ ಹೆಸರೇಳುವ ನಾವು ಹೇಗೆ ನಡೆದುಕೊಳ್ಳಬೇಕು ಅಂತ ತೀರ್ಮಾನ ಮಾಡಬೇಕಿದೆ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ನಾವು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆದರೆ, ಪ್ರಧಾನಿ ಮೋದಿಯವರು ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡ್ತಿದ್ದಾರೆ. ನರೇಂದ್ರ ಮೋದಿ ನಾಯಕತ್ವದಲ್ಲೇ ನಾವು ಕೆಲಸ ಮಾಡೋದು ನಮ್ಮ ಸೌಭಾಗ್ಯ. ಇದನ್ನು ಅರ್ಥ ಮಾಡಿಕೊಂಡು ಪಕ್ಷ ಬಲವರ್ಧನೆ ಮಾಡಬೇಕು ಎಂದು ತಿಳಿಸಿದ್ದಾರೆ.

ವಿಜಯೇಂದ್ರ ಅಧ್ಯಕ್ಷ ಆದ್ಮೇಲೆ ಸಂಚಲನ

ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಬಂದಿದೆ. ಕಳೆದ ಚುನಾವಣೆಯ ಸೋಲಿನ ಬಗ್ಗೆ ಚರ್ಚೆ ಮಾಡೋಕೆ ಹೋಗಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಪಿ.ರಾಜೀವ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಸಂಸದರು, ಶಾಸಕರು, ಮಾಜಿ ಸಚಿವರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version