Site icon PowerTV

ರಾಜ್ಯದ ಏಳು ಕೋಟಿ ಕನ್ನಡಿಗರೂ ದೇವೇಗೌಡರ ಜೊತೆ ಇದ್ದೇವೆ: ಸಿದ್ದರಾಮಯ್ಯ

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ನಿನ್ನೆ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದ್ದರು. ಈ ವೇಳೆ ಪರೋಕ್ಷವಾಗಿ ರಾಜ್ಯ ಕರ್ನಾಟಕ ಸರ್ಕಾರಕ್ಕೂ ಟಾಂಗ್​ ನೀಡಿದ್ದರು. ಇದೀಗ ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಟ್​ ಮಾಡಿದ್ದಾರೆ.

ಏನಿದೆ ಟ್ವಿಟ್​ನಲ್ಲಿ !

ಸನ್ಮಾನ್ಯ ದೇವೇಗೌಡ ಅವರೇ ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ‍್ಳುತ್ತಿದ್ದೇನೆ.

ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.

ಇದನ್ನೂ ಓದಿ :ಗಂಡು ಮಗುವಿಗೆ ಜನ್ಮ ನೀಡಿದ್ದ 6 ದಿನದ ಬಾಣಂತಿ ಸಾ*ವು !

ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.

Exit mobile version