Friday, September 12, 2025
HomeUncategorizedಡಿ.ಕೆ.ಶಿ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?:ಹೆಚ್​ಡಿಕೆ ಕಿಡಿ

ಡಿ.ಕೆ.ಶಿ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?:ಹೆಚ್​ಡಿಕೆ ಕಿಡಿ

ಬೆಂಗಳೂರು : ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಕಿಡಿ ಕಾರಿದ್ದಾರೆ.

ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ ; ರೈತರ ಪ್ರತಿಭಟನೆ

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು,ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ? ಎಂದು ಅವರು ಪ್ರಶ್ನಿಸಿದ್ದಾರೆ.

2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!! ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಕಷ್ಟ ಸ್ಥಿತಿಯ ಬಗ್ಗೆ  ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.

ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ? ಎಂದು ಅವರು ಹೇಳಿದ್ದಾರೆ.

ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಹಾಗೂ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments