ಉತ್ತರಪ್ರದೇಶ: 2012ರಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದಿಲ್ಲಿಯ ನಿರ್ಭಯಾ ಪ್ರಕರಣವನ್ನು ನೆನಪಿಸುವ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವು ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.
50ರ ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಪ್ರಕರಣ ಜನರನ್ನು ಬೆಚ್ಚಿ ಬಿಳಿಸಿದೆ. ಬದೌನ್ ಜಿಲ್ಲೆಯ ಉಘೈಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಳೆದ ಭಾನುವಾರ ಸಂಜೆ ದೇವಸ್ಥಾನಕ್ಕೆ ಪೂಜೆಗೆಂದು ಹೋದವರು ಮತ್ತೆ ವಾಪಸಾಗಲಿಲ್ಲ. ಬಳಿಕ ಅವರು ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದರು. ಘಟನೆಗೆ ಸಂಬಂಧಿಸಿ ಅರ್ಚಕ ಸೇರಿ ಮೂವರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.