ಬೆಂಗಳೂರು : ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಸಮಸ್ಯೆಗೆ ಕೊನೆಗೂ ಒಂದು ತಾರ್ಕಿಕ ಪರಿಹಾರ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಒಪ್ಪಿಗೆ ನೀಡಿದ್ದು, ಬಜೆಟ್ನಲ್ಲಿ ಅನುದಾನ ಕಾಯ್ದಿರಿಸಿ ಮಹದಾಯಿ ಯೋಜನೆಯನ್ನು ಕೂಡಲೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, “ನಮ್ಮ ಬಹುಕಾಲದ ಹೋರಾಟಕ್ಕೆ ಸೂಕ್ತ ಸ್ಪಂದನೆ ದೊರೆತಿದೆ. ಈ ಮಹದಾಯಿ ಅಧಿಸೂಚನೆಯನ್ವಯ ರಾಜ್ಯಕ್ಕೆ 13.5 ಟಿಎಂಸಿ ನೀರು ದೊರೆಯಲಿದ್ದು, ಹುಬ್ಬಳ್ಳಿ- ಧಾರವಾಡ ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆ ಮತ್ತು ಕೃಷಿ ನೀರಾವರಿಗೂ ಅನುಕೂಲವಾಗಲಿದೆ” ಎಂದು ತಿಳಿಸಿದರು.
ಇನ್ನು ಇದೇ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿಯ ಪ್ರಹ್ಲಾದ್ ಜೋಶಿ ” ಮಹದಾಯಿ ನದಿ ನೀರಿನ ಹಂಚಿಕೆಯ ಸಂಬಂಧವಾಗಿ ಸುಪ್ರಿಂಕೋರ್ಟ್ ಆದೇಶ ನೀಡಿದ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯದಲ್ಲೂ ನಾವು ಅತ್ಯುತ್ತಮ ವಾದ ಮಂಡನೆ ಮಾಡಿದ್ದೆವು, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಮಾನ್ಯ ಜಲಸಂಪನ್ಮೂಲ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.