ಕೋಲಾರ: ಜಿಲ್ಲೆಯ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬನಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ. ಡಿವೈಸಿಪಿ ಸಹಿತ 22 ಮಂದಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಮುಳಬಾಗಿಲು ಪಟ್ಟಣದಲ್ಲಿ ಕಳೆದ ವಾರ ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯ ಆತ್ಮಹತ್ಯೆ ಘಟನೆಯು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮುಳಬಾಗಿಲು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದರು. ಆರೋಪಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದ ವರದಿಯು ಸೋಮವಾರ ಬಂದಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಆರೋಪಿಯ ಸಂಪರ್ಕಕ್ಕೆ ಬಂದಿದ್ದ ಮುಳಬಾಗಲು ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ 22 ಮಂದಿ ಪೊಲೀಸರನ್ನು ಹೋಂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ. ಮುಳಬಾಗಿಲಿನ ನಗರ ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿಗಳನ್ನು ಬಂದ್ ಮಾಡಲಾಗಿದ್ದು, ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಗಿದೆ. ಪ್ರಸ್ತುತ ನಗರ ಠಾಣೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.