ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ: ಕರಾವಳಿ ತೀರದಲ್ಲಿ ಗಾಳಿ ಮಳೆ ಸಾಧ್ಯತೆ

0
164

ಉಡುಪಿ: ಮುಂದಿನ 24 ಗಂಟೆಯೊಳಗೆ ಕರ್ನಾಟಕ ಕರಾವಳಿ ತೀರದಲ್ಲಿ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪ ಪರಿಸರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ತೀವ್ರಗೊಂಡು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ತಾಸುಗಳಲ್ಲಿ ವ್ಯಾಪಕ ಗಾಳಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅರಬ್ಬೀ ಸಮುದ್ರದಲ್ಲಿ ನಿಮ್ನ ಒತ್ತಡ ಜತೆಗೆ ಟ್ರಫ್ ಉಂಟಾಗಿರುವುದರಿಂದ ಸಮುದ್ರದ ಮೇಲ್ಮೈಯಿಂದ ಬಲವಾದ ಗಾಳಿ ಬೀಸಲಿದೆ. ಗಂಟೆಗೆ 35-45ಕಿ.ಮೀ. ವೇಗದ ಬಿರುಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ತಿರುವನಂತಪುರದ ಹವಾಮಾನ ಕೇಂದ್ರದ ಸೈಕ್ಲಾನ್ ವಾರ್ನಿಂಗ್ ಸೆಂಟರ್ ಎಚ್ಚರಿಕೆ ನೀಡಿದೆ. ಹೀಗಾಗಿ ಕೇರಳ ಮತ್ತು ಕರ್ನಾಟಕ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗವು ಗಂಟೆಗೆ 90-ರಿಂದ 100ಕಿ.ಮೀ. ದಾಟುವ ಸಾಧ್ಯತೆ ಇದ್ದು, ಇದರ ಪರಿಣಾಮ ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here