ಚಿಕ್ಕಮಗಳೂರು: ಕೊರೊನಾ ಆತಂಕ ಹಾಗೂ ಲಾಕ್ಡೌನ್ ಬಿಸಿ ನಡುವೆ ಮುಂದೂಡಿಕೆ ಆಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಂತು ದಿನಾಂಕ ಫಿಕ್ಸ್ ಆಗಿದೆ. ಜೂನ್ 18ರಂದು ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯಲ್ಲಿ 9,986 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1,300 ವಿದ್ಯಾರ್ಥಿಗಳು ಹೊರ ಜಿಲ್ಲೆಯಿಂದ ಬಂದು ಕಾಫಿನಾಡಲ್ಲಿ ಪರೀಕ್ಷೆ ಬರೆಯಲಿದ್ದು, 120 ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಲು ಸಿಬ್ಬಂದಿಗಳು ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ 600 ಸಿಬ್ಬಂದಿಗಳನ್ನು ಒಳಗೊಂಡಂತೆ ಹಲವಾರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಿದ್ದಾರೆ. ಈಗಾಗಲೇ 18 ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸ್ಯಾನಿಟೈಸಿಂಗ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳ ಕ್ರಮ ಸಂಖ್ಯೆಯನ್ನು ಬರೆಯಲಾಗಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಪರೀಕ್ಷೆಗೆ ಬರುವಾಗ ಧರಿಸುವುದು ಕಡ್ಡಾಯ, ಕುಡಿಯುವ ನೀರಿನ ಬಾಟಲಿಯನ್ನು ತರಲು ಸೂಚಿಸಲಾಗಿದೆ. ಇನ್ನು ಪರೀಕ್ಷಾ ಸಮಯಕ್ಕೂ ಒಂದು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಹಾಗೂ ಸ್ಯಾನಿಟೇಸ್ ಮಾಡಲು ಪಿಯು ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ