ಶಿವಮೊಗ್ಗ: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ನಡೆಯುವ ಆಂಗ್ಲ ಪರೀಕ್ಷೆಗಾಗಿ 33 ಪರೀಕ್ಷಾ ಕೇಂದ್ರಗಳು ಹಾಗೂ 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 5 ಪರೀಕ್ಷಾ ಕೇಂದ್ರಗಳಲ್ಲಿ 900ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಕೋವಿಡ್-19ರ ಮಾರ್ಗಸೂಚಿಯಂತೆ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಮಾಡಿ ಸ್ಯಾನಿಟೈಸಿಂಗ್ ಮಾಡಿಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳಿಗೆ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳು ಆರೋಗ್ಯ ಸುರಕ್ಷತೆಯ ದೃಷ್ಠಿಯಿಂದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪರೀಕ್ಷಿಸಿ ಕೊಠಡಿವಾರು ಒಳ ಬಿಡಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ.
ಕಂಟೈನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಹೊರ ಜಿಲ್ಲೆಗಳಿಂದ 791 ವಿದ್ಯಾರ್ಥಿಗಳು ಹಾಗೂ ಈ ಜಿಲ್ಲೆಯಿಂದ 372 ವಿದ್ಯಾರ್ಥಿಗಳು ಇತರೆ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು, ನೀರಿನ ಬಾಟಲಿ ತೆಗೆದುಕೊಂಡು, ಪ್ರವೇಶ ಪತ್ರ ಮತ್ತು ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9 ಗಂಟೆಯೊಳಗಾಗಿ ಹಾಜರಾಗಬೇಕಿದೆ. ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಸ್ವಂತ ವ್ಯವಸ್ಥೆಯಿಂದ ಬರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜು ಬಸ್ಸಿನ ಹಾಗೂ ಸರ್ಕಾರಿ ಬಸ್ಗಳ ಸೌಲಭ್ಯವನ್ನು ಒದಗಿಸಲಾಗಿದೆ.