ಶಿವಮೊಗ್ಗ: ವಿದ್ಯಾರ್ಥಿ ವೇತನವೂ ಸೇರಿದಂತೆ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕೊರೋನಾದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ವೇತನವೂ ಸಹ ಬಿಡುಗಡೆಯಾಗಿಲ್ಲ. ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಸರ್ಕಾರ ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಮತ್ತು ಹಾಸ್ಟೆಲ್ ಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಅನೇಕ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರು ಇಲ್ಲ. ಈಗ ಕಾಲೇಜುಗಳು ಆರಂಭವಾಗಿವೆ. ವಿದ್ಯಾರ್ಥಿಗಳಿದ್ದಾರೆ. ಉಪನ್ಯಾಸಕರೇ ಇಲ್ಲದಂತಾಗಿದೆ. ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಎಲ್ಲಾ ತರಗತಿ ನಡೆಯುವಂತೆ ನೋಡಿಕೊಳ್ಳಬೇಕು. ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈಗಾಗಲೇ, ಕಾಲೇಜುಗಳು ಆರಂಭವಾಗಿದ್ದು, ಅನೇಕ ಹಳ್ಳಿಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲವಾಗಿದೆ. ಇದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಕಾಲೇಜುಗಳಿಗೆ, ಹಾಸ್ಟೆಲ್ ಗಳಿಗೆ ತುಂಬಾ ದೂರ ಇರುವುದರಿಂದ ಹಾಸ್ಟೆಲ್ ಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.